ಎಸ್.ಆರ್. ಪಿಯು ಕಾಲೇಜು, ಹೆಬ್ರಿಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ವಿಶೇಷ ಓರಿಯಂಟೇಶನ್ ಕಾರ್ಯಕ್ರಮ ಎಸ್.ಆರ್. ಆಡಿಟೋರಿಯಂನಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಶ್ರೀ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಭಾಗವಹಿಸಿ, ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣದ ಮಹತ್ವವನ್ನು ಅರಿತು ಶಿಸ್ತು, ಸಮಯಪಾಲನೆ ಹಾಗೂ ನಿರಂತರ ಪರಿಶ್ರಮದ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬೇಕು. ಶಿಕ್ಷಣದಲ್ಲಿ ಪೋಷಕರ ಪಾತ್ರ ಮಹತ್ತರವಾದುದು, ಮಕ್ಕಳು ಪೋಷಕರನ್ನು ಅನುಕರಣೆ ಮಾಡುವುದರಿಂದ ಮನೆಯಲ್ಲಿ ಕಲಿಕೆಗೆ ಬೇಕಾಗುವ ವಾತಾವರಣ ನಿರ್ಮಿಸುವ ಜವಾಬ್ದಾರಿ ಪೋಷಕರದ್ದು, ಕಲಿಕಾ ವಾತಾವರಣ ನಿರ್ಮಿಸಿ ಎಂದು ಪೋಷಕರಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಆರ್. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಎಚ್. ನಾಗರಾಜ್ ಶೆಟ್ಟಿ ವಹಿಸಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಂಸ್ಥೆ ಬದ್ಧವಾಗಿದ್ದು, ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಮೌಲ್ಯಗಳನ್ನು ಬೆಳೆಸುವ ಉದ್ದೇಶವನ್ನು ವಿವರಿಸಿದರು.
ಅತಿಥಿಯಾಗಿ ಭಾಗವಹಿಸಿದ ಎಸ್.ಆರ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀಮತಿ ಸಪ್ನಾ ಎನ್. ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಶಿಕ್ಷಣದ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ ಹೆಬ್ರಿ ಅವರು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿ, ಕಾಲೇಜಿನ ನಿಯಮಾವಳಿ, ಶಿಸ್ತು, ಹಾಜರಾತಿ, ಪರೀಕ್ಷಾ ವಿಧಾನ, ಸಮವಸ್ತ್ರ, ಮೊಬೈಲ್ ಬಳಕೆ ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಫಲಿತಾಂಶ ಸುಧಾರಣೆಗೆ ಕೈಗೊಳ್ಳಲಾಗಿರುವ ವಿಶೇಷ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ಗೀತಾ ಪ್ರಭು ಅವರು ಅಚ್ಚುಕಟ್ಟಾಗಿ ನಿರೂಪಿಸಿದರು. ಕೊನೆಯಲ್ಲಿ ಉಪನ್ಯಾಸಕಿ ಶ್ರೀಮತಿ ಪ್ರೀತಿ ಹೆಗ್ಡೆ ಅವರು ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಪಯಣಕ್ಕೆ ಮಾರ್ಗದರ್ಶಕವಾಗಿ ನೆರವಾಯಿತು.


















