ಮಗನಿಗೆ ಕೇಂದ್ರೀಯ ವಿದ್ಯಾಲಯದಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ, ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಡಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗೆ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ನ್ಯಾ|ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ಪ್ರಜ್ವಲ್ ಪರ ವಕೀಲರು, ಪ್ರಕರಣ ಸಂಬಂಧ ವಿಚಾರಣೆ ನಡೆಸಿರುವ ಪೊಲೀಸರು ಈಗಾಗಲೇ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಆದ್ದರಿಂದ ಜಾಮೀನು ನೀಡಲು ಕೋರಿದರು. ಅರ್ಜಿ ಸಂಬಂಧ ಎಸ್‌ಐಟಿಗೆ ನೋಟಿಸ್ ನೀಡಿ, ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಜು.3ಕ್ಕೆ ವಿಚಾರಣೆ ಮುಂದೂಡಿತು.



















