ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆಯು ಬುಧವಾರ ಸುತ್ತೋಲೆ ಹೊರಡಿಸಿದೆ.
ರಾಷ್ಟ್ರೀಯ ಹಬ್ಬಗಳು, ನಾಡಹಬ್ಬವಾದ ಕನ್ನಡ ರಾಜ್ಯೋತ್ಸವ ಹಾಗೂ ಇತರೆ ಪ್ರಮುಖ ಜಯಂತಿಗಳನ್ನು ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ನಿಯಮಾನುಸಾರ ಆಯಾ ದಿನಗಳಂದೇ ಕಡ್ಡಾಯವಾಗಿ ಆಚರಿಸಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ನವೆಂಬರ್ 1ರ ರವಿವಾರದಂದು ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಕಡ್ಡಾಯವಾಗಿ ಹಾಗೂ ಗೌರವಪೂರ್ವಕವಾಗಿ ಆಚರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಹಾಗೂ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ.
ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಡಗರದಿಂದ ಆಚರಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಇಲಾಖೆಯು ಸೂಚಿಸಿದೆ.






























