ಕಾರ್ಕಳದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳ ಶಿಕ್ಷಕ-ರಕ್ಷಕ ಸಂಘದ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ‘ಮಕ್ಕಳ ಹಬ್ಬ’ ಕಾರ್ಯಕ್ರಮವು ಸ್ಥಳೀಯ ಗಾಂಧಿ ಮೈದಾನದಲ್ಲಿ ಸಂಭ್ರಮ ಮತ್ತು ಸಡಗರದಿಂದ ಅದ್ದೂರಿಯಾಗಿ ನಡೆಯಿತು.
ಕಾರ್ಕಳದ ಶ್ರೀನಿವಾಸ್ ಗ್ಲಾಸ್ ಟ್ರೇಡರ್ಸ್ ಮಾಲೀಕ ಎಂ. ಗಣಪತಿ ಪೈ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯು ದುರ್ಬಲ ವರ್ಗದ ವಿದ್ಯಾರ್ಥಿಗಳ ಏಳಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ. ಈ ಕಾರಣದಿಂದಲೇ ರಾಜ್ಯದಲ್ಲಿಯೇ ವಿಶೇಷ ಸ್ಥಾನಮಾನವನ್ನು ಪಡೆದಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅತಿಥಿಗಳಾಗಿ ಆಗಮಿಸಿದ್ದ ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ ಟಿ.ಆರ್. ಅವರು ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬದುಕಬೇಕು ಎಂದು ಕಿವಿಮಾತು ಹೇಳಿದರು.
ಇನ್ನೋರ್ವ ಅತಿಥಿ, ಕಾರ್ಕಳ ಹೆಲ್ತ್‌ಕೇರ್‌ನ ವೈದ್ಯ ಡಾ. ಪ್ರಕಾಶ್ ಶೆಣೈ ಅವರು ಮಾತನಾಡಿ, ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಯಶಸ್ಸು ಹೆಮ್ಮೆಯ ಸಂಗತಿಯಾಗಿದೆ. ಅವರ ಸಾಧನೆಗಳು ಮುಂದುವರಿಯಲಿ ಎಂದು ಹಾರೈಸಿದರು.
ಸತತ ಎರಡು ಬಾರಿ ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ವಾಲಿಬಾಲ್‌ನಲ್ಲಿ ಸತತ ಐದು ಬಾರಿ ವಿಭಾಗೀಯ ಮಟ್ಟದಲ್ಲಿ ಶಾಲೆಯನ್ನು ಪ್ರತಿನಿಧಿಸಿದ ಹತ್ತನೇ ತರಗತಿಯ ವಿದ್ಯಾರ್ಥಿನಿ ಶೈನಿ ಡಿಸೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬಳಿಕ ಗಣ್ಯರು ಮಕ್ಕಳೇ ತಯಾರಿಸಿದ ವಿವಿಧ ವಿಜ್ಞಾನ ಮಾದರಿಗಳು, ಚಿತ್ರಕಲೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ, ಆಹಾರ ಮಳಿಗೆಗಳು ಹಾಗೂ ಮನೋರಂಜನಾ ಆಟಗಳ ಮಳಿಗೆಗಳನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಆವೆಲಿನ್ ಲೂಯಿಸ್, ಟ್ರಸ್ಟ್ ಸದಸ್ಯ ಡಾ. ಪೀಟರ್ ಫೆರ್ನಾಂಡಿಸ್, ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಐ. ಕ್ರಿಸ್ಟೋಫರ್ ಕೋಟ್ಯಾನ್, ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿ. ಜಾಲಿ ಜೇಕಬ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ, ವಿಶ್ವನಾಥ ಪೂಜಾರಿ ಹಾಗೂ ವನಿತಾ ಶೆಟ್ಟಿ ಉಪಸ್ಥಿತರಿದ್ದರು.
ಕ್ರೀಡಾಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಸಾಧನೆಗೈದು ಸಂಸ್ಥೆಯ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿಗಳಾದ ಸಿಯಾ ಅಂಚನ್, ಪ್ರಾನ್ವಿ ಎಸ್. ದೇವಾಡಿಗ, ಆಶಿ ಶೆಟ್ಟಿ, ಅಶೆಲ್ ಡಿ ಅಲ್ಮೇಡ, ಅಕ್ಷಯ್ ಪ್ರಭು, ಸುಧೀಕ್ಷಾ, ಮೌಲ್ಯ, ವರುಣ್ ಕೆ. ಕಾಮತ್, ಸಾನ್ವಿ ಎಂ. ನಾಯಕ್, ರಿತು ಪ್ರಾನ್ಸಿಸ್, ಶಾನ್ ಡಿಸೋಜ, ಅಂಕುಶ್ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಕ್ಕಳ ಹಬ್ಬದ ಅಂಗವಾಗಿ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳ ಪ್ರದರ್ಶನ, ಚಿತ್ರಕಲೆ, ಕರಕುಶಲ ವಸ್ತುಗಳ ಪ್ರದರ್ಶನ, ವಿವಿಧ ಬಗೆಯ ತಿಂಡಿ-ತಿನಿಸುಗಳ ಆಹಾರ ಮಳಿಗೆಗಳು, ಮನೋರಂಜನಾ ಆಟಗಳು ಹಾಗೂ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಚಟುವಟಿಕೆಗಳು ಗಮನ ಸೆಳೆದವು. ಮಕ್ಕಳಿಂದ ವಿವಿಧ ಮನೋರಂಜನಾ ಸಾಂಸ್ಕೃತಿಕ ಕಾರ್ಯಕ್ರಮಗಳೂ ಜರುಗಿದವು.
ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ ಸ್ವಾಗತಿಸಿದರು. ಆಂಗ್ಲಭಾಷಾ ಶಿಕ್ಷಕಿ ಆ್ಯಲಿಸ್ ಲೋಬೊ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
































