ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಮಾಜಿ ಮುಖ್ಯಮಂತ್ರಿಯಾಗುತ್ತಿದ್ದಂತೆ ದೆಹಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಸಿದ್ದರಾಮಯ್ಯ ಅವರ ಪ್ರಭಾವ ಕಡಿಮೆಯಾಯಿತೇ ಎಂಬ ಪ್ರಶ್ನೆ ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಸೋಮವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘Belonging: A Journey of Love’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ನಾಯಕರಿಗೆ ಕಲ್ಪಿಸಲಾದ ಆಸನ ವ್ಯವಸ್ಥೆ ಈ ಚರ್ಚೆಗೆ ಕಾರಣವಾಗಿದೆ.
ಆಯ್ದ ಕಾಂಗ್ರೆಸ್ ನಾಯಕರು ಹಾಗೂ ಗಣ್ಯರಿಗೆ ಮಾತ್ರ ಆಹ್ವಾನವಿದ್ದ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎರಡನೇ ಸಾಲಿನಲ್ಲಿ ಆಸನ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಐದನೇ ಸಾಲಿನಲ್ಲಿ ಆಸನ ನೀಡಲಾಗಿತ್ತು.
ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ಐದನೇ ಸಾಲಿನಲ್ಲಿ ಕುಳಿತಿರುವ ಫೋಟೋಗಳು ಹೊರಬರುತ್ತಿದ್ದಂತೆ ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳು ಆರಂಭವಾಗಿವೆ. ಅಧಿಕಾರದಲ್ಲಿದ್ದಾಗ ದೆಹಲಿ ಮಟ್ಟದಲ್ಲಿ ಹೊಂದಿದ್ದ ಪ್ರಭಾವಕ್ಕೂ, ಅಧಿಕಾರದಿಂದ ಕೆಳಗಿಳಿದ ಬಳಿಕದ ಸ್ಥಾನಮಾನಕ್ಕೂ ವ್ಯತ್ಯಾಸವಿದೆಯೇ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.
ಅದೇ ರೀತಿ, ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎರಡನೇ ಸಾಲಿನಲ್ಲಿ ಸ್ಥಾನ ಕಲ್ಪಿಸಿರುವುದು ಕೂಡ ರಾಜಕೀಯ ವಲಯದ ಗಮನ ಸೆಳೆದಿದೆ.































