
ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ನೀಡುತ್ತಿರುವಂತೆ, ಖಾಸಗಿ ಫೈನಾನ್ಸ್ ಕಂಪೆನಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಕಟಿಸಿದ್ದಾರೆ.
ವಿಧಾನ ಪರಿಷತ್ತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಸಿ.ಎನ್. ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ಈವರೆಗೆ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಪರಿಹಾರ ನೀಡುತ್ತಿರಲಿಲ್ಲ. ಈಗ ಅವರಿಗೂ ಪರಿಹಾರ ನೀಡುವ ಆಲೋಚನೆಯಿದೆ. ಈ ಬಗ್ಗೆ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಮಾಲೋಚಿಸಿ ಸಧ್ಯದಲ್ಲೇ ಪರಿಹಾರ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.






































